ರೈತರ ಸಮಸ್ಯೆ ಪರಿಹಾರಕ್ಕೆ ಕೇಂದ್ರ ಸರ್ಕಾರ ಕೂಡಲೇ ಕನಿಷ್ಠ ಬೆಂಬಲ ಬೆಲೆ (MSP) ಘೋಷಿಸಬೇಕು ಎಂದು ಬೆಳಗಾವಿಯ ಅಥಣಿಯಲ್ಲಿ ಸಚಿವ ಮಧು ಬಂಗಾರಪ್ಪ ಒತ್ತಾಯಿಸಿದ್ದಾರೆ.
ಬೆಳಗಾವಿ: ರೈತರ ಕೃಷಿ ಸಂಕಷ್ಟಗಳು ಹಾಗೂ ಕಬ್ಬು ಬೆಳೆಗಾರರ ನ್ಯಾಯಯುತ ಬೇಡಿಕೆಗಳ ಈಡೇರಿಕೆಯಲ್ಲಿ ಕೇಂದ್ರ ಸರ್ಕಾರದ ಧೋರಣೆ ಮಲತಾಯಿ ಧೋರಣೆಯಿಂದ ಕೂಡಿದೆ ಎಂದು ರಾಜ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ
ಮಧು ಬಂಗಾರಪ್ಪ ತೀವ್ರವಾಗಿ ಕಿಡಿಕಾರಿದ್ದಾರೆ.
ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ರೈತ ಮುಖಂಡರು ಹಾಗೂ ಪ್ರತಿಭಟನಾಕಾರರ ಅಹವಾಲುಗಳನ್ನು ಆಲಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ತನ್ನ ಮಿತಿಯಲ್ಲಿ ರೈತರಿಗೆ ಗರಿಷ್ಠ ನೆರವು ನೀಡುತ್ತಿದ್ದು, ಇನ್ನುಳಿದ ಪ್ರಮುಖ ಆರ್ಥಿಕ ಹಾಗೂ ನೀತಿ ನಿರ್ಧಾರಗಳನ್ನು ಕೇಂದ್ರ ಸರ್ಕಾರವೇ ಕೈಗೊಳ್ಳಬೇಕಿದೆ ಎಂದು ಸ್ಪಷ್ಟಪಡಿಸಿದರು.
ಕೇಂದ್ರದ ಮಲತಾಯಿ ಧೋರಣೆ:
ದೇಶದ ಇAತಹ ಹಲವು ರಾಜ್ಯಗಳಲ್ಲಿ ರೈತರ ಆರ್ಥಿಕ ಭದ್ರತೆಗೆ ಕೇಂದ್ರ ಸರ್ಕಾರ ವಿಶೇಷ ಆರ್ಥಿಕ ನೆರವು ಹಾಗೂ ಪ್ಯಾಕೇಜ್‌ಗಳನ್ನು ಒದಗಿಸುತ್ತಿದೆ. ಆದರೆ ಕರ್ನಾಟಕದ ರೈತರ ವಿಚಾರದಲ್ಲಿ ಕೇಂದ್ರ ಸಚಿವರು ಮೌನ ವಹಿಸಿರುವುದು ಖಂಡನೀಯ. ಕೃಷಿ ಕ್ಷೇತ್ರವನ್ನು ಉಳಿಸಲು ಕೇಂದ್ರ ತನ್ನ ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿದೆ ಎಂದು ಅವರು ಆರೋಪಿಸಿದರು.
"ರಾಜ್ಯ ಸರ್ಕಾರ ರೈತರ ಬೆನ್ನೆಲುಬಾಗಿ ನಿಂತಿದೆ. ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಶಾಶ್ವತವಾಗಿ ಪರಿಹರಿಸಲು ಕನಿಷ್ಠ ಬೆಂಬಲ ಬೆಲೆ (MSP) ನಿಗದಿಯಾಗಬೇಕು. ಕೇಂದ್ರ ಸರ್ಕಾರ ತನ್ನ ಪಾಲಿನ ಆರ್ಥಿಕ ನೆರವು ಘೋಷಿಸಿದರೆ, ನಮ್ಮ ಸರ್ಕಾರವೂ ತನ್ನ ಪಾಲಿನ ಹಣವನ್ನು ಬಿಡುಗಡೆ ಮಾಡಲು ಸಂಪೂರ್ಣ ಸಿದ್ಧವಿದೆ." - ಮಧು ಬಂಗಾರಪ್ಪ, ಸಚಿವ
ಮುಂದಿನ ಹೋರಾಟದ ರೂಪುರೇಷೆ:
ರೈತರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ, ವೈಜ್ಞಾನಿಕ ಬೆಂಬಲ ಬೆಲೆಯನ್ನು ಘೋಷಿಸಬೇಕು. ತಪ್ಪಿದ್ದಲ್ಲಿ ರಾಜ್ಯಾದ್ಯಂತ ರೈತರನ್ನು ಒಗ್ಗೂಡಿಸಿ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಸಚಿವರು ಎಚ್ಚರಿಕೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಸ್ಥಳೀಯ ರೈತ ಮುಖಂಡರು ಮತ್ತು ಪ್ರಮುಖರು ಉಪಸ್ಥಿತರಿದ್ದರು.